ಮುಂಬೈ : ಭಾರತ-ಸೌತ್ ಆಫ್ರಿಕಾ ನಡುವಣ ಏಕದಿನ ಸರಣಿ ಶುರುವಾಗಿದೆ. ರಾಂಚಿಯ ಜೆಎಸ್ಸಿಎ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಸರಣಿಯ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ದಿಗ್ಗಜರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಸೌತ್ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುವುದರೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ಪಂದ್ಯಗಳನ್ನಾಡಿದ ಜೋಡಿ ಎಂಬ ವಿಶ್ವ ದಾಖಲೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯ ಹೆಸರಿಗೆ ಸೇರ್ಪಡೆಯಾಗಿದೆ. ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹಾಗೂ ದಿ ವಾಲ್ ಖ್ಯಾತಿಯ ರಾಹುಲ್ ದ್ರಾವಿಡ್ ಹೆಸರಿನಲ್ಲಿತ್ತು. ಸಚಿನ್-ರಾಹುಲ್ ಜೋಡಿಯು ಜೊತೆಯಾಗಿ 391 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ. ಈ ಮೂಲಕ ಇಂಟರ್ನ್ಯಾಷನಲ್ ಕ್ರಿಕೆಟ್ನಲ್ಲಿ ಜೊತೆಯಾಗಿ ಅತೀ ಹೆಚ್ಚು ಪಂದ್ಯಗಳನ್ನಾಡಿದ ವಿಶ್ವ ದಾಖಲೆ ನಿರ್ಮಿಸಿದ್ದರು.
ಇದೀಗ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಜೊತೆಯಾಗಿ ಕಣಕ್ಕಿಳಿಯುವ ಮೂಲಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ (392), ಸಚಿನ್ ತೆಂಡೂಲ್ಕರ್ ಹಾಗೂ ರಾಹುಲ್ ದ್ರಾವಿಡ್ (391) ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಮುರಿದಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಇದೀಗ 392 ಪಂದ್ಯಗಳೊಂದಿಗೆ ಅಗ್ರಸ್ಥಾನಕ್ಕೇರಿರುವ ರೋಹಿತ್-ಕೊಹ್ಲಿ ಜೋಡಿಯು ಮುಂಬರುವ ಸರಣಿಗಳ ಮೂಲಕ ಇಂಟರ್ನ್ಯಾಷನಲ್ ಕ್ರಿಕೆಟ್ನಲ್ಲಿ ಜೊತೆಯಾಗಿ 400 ಪಂದ್ಯಗಳನ್ನಾಡಿದ ವಿಶೇಷ ದಾಖಲೆ ಬರೆಯುವ ಅವಕಾಶ ಹೊಂದಿದ್ದಾರೆ. ಹೀಗಾಗಿ ಶೀಘ್ರದಲ್ಲೇ ರೋ-ಕೊ ಜೋಡಿಯಿಂದ ಮತ್ತೊಂದು ಭರ್ಜರಿ ವಿಶ್ವ ದಾಖಲೆಯನ್ನು ನಿರೀಕ್ಷಿಸಬಹುದು.