ಬೆಂಗಳೂರು : ಕೆಂಪಾಪುರದಲ್ಲಿರುವ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಸಮಾಧಿಯನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಮಾಗಡಿ ಪಟ್ಟಣದಲ್ಲಿ ವಿವಿಧ ಇಲಾಖೆಯ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭದಲ್ಲಿ ಮಾತನಾಡಿದ್ದಾರೆ. ಮಾಗಡಿಯಲ್ಲಿ ಕೆಂಪೇಗೌಡರು ನಿರ್ಮಿಸಿದ ಐತಿಹಾಸಿಕ ಕೋಟೆ, ಸೋಮೇಶ್ವರ ದೇವಾಲಯ, ನಾಡಪ್ರಭು ಕೆಂಪೇಗೌಡರು ಕಟ್ಟಿರುವ ಐತಿಹಾಸಿಕ ಮಾಗಡಿ ಕೋಟೆಯ ಹಳೆಯ ವೈಭವವನ್ನು ಹಿಂದಿರುಗಿಸಲು, ಸಂರಕ್ಷಿಸಲು ಕೋಟೆಯ ಪುನರುಜ್ಜೀವನ ಕಾರ್ಯಕ್ಕಾಗಿ 103 ಕೋಟಿ ರೂಪಾಯಿ ಅನುದಾನವನ್ನು ಬೆಂಗಳೂರು ನಗರದಿಂದ ನೀಡಿದ್ದೇನೆ ಎಂದಿದ್ದಾರೆ. ಬೆಂಗಳೂರಿನ ಸುಮನಹಳ್ಳಿಯಲ್ಲಿ 5 ಎಕರೆ ಜಾಗದಲ್ಲಿ ಕೆಂಪೇಗೌಡ ಭವನ ನಿರ್ಮಿಸುವ ಕಾರ್ಯ ನಡೆಯುತ್ತಿದ್ದು, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಈ ಬಗ್ಗೆ ರೂಪುರೇಷೆ ಸಿದ್ಧಪಡಿಸಿ, ಚರ್ಚಿಸಿದ್ದಾರೆ. ಕೆಂಪೇಗೌಡರ ಋಣ ತೀರಿಸಲು ಮಾಗಡಿ ಅಭಿವೃದ್ಧಿಗೆ ನಾವು ಬದ್ಧ. ಮಾಗಡಿ ಕ್ಷೇತ್ರವನ್ನು ಅಭಿವೃದ್ಧಿಪಡಿಸಿ, ಕೆಂಪೇಗೌಡರ ಹೆಸರು ಶಾಶ್ವತವಾಗಿ ಉಳಿಸಲು ನಾವು ಬದ್ಧ ಎಂದು ಹೇಳಿದ್ದಾರೆ. ಮಾಗಡಿ ಪಟ್ಟಣದಲ್ಲಿ 40 ಕೋಟಿ ರೂಪಾಯಿ ವೆಚ್ಚದಲ್ಲಿ ಎರಡು ಎಕರೆ ಜಾಗದಲ್ಲಿ 100 ಹಾಸಿಗೆ ಸಾಮರ್ಥ್ಯದ ಆತ್ಯಾಧುನಿಕ, ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭದಲ್ಲಿ ಡಿಕೆ ಶಿವಕುಮಾರ್ ಈ ವಿಚಾರ ಹಂಚಿಕೊಂಡಿದ್ದಾರೆ.