ಬೆಂಗಳೂರು ದಕ್ಷಿಣ : ಬಿಡದಿ ಸ್ಮಾರ್ಟ್ ಸಿಟಿ ಯೋಜನೆ ಕೈಬಿಡುವಂತೆ ಆಗ್ರಹಿಸಿ ಪ್ರತಿಭಟನೆ ನೂರಾರು ರೈತರು ಪ್ರತಿಭಟನೆ ನಡೆಸಿದರು. ಬಿಡದಿ ಟೌನ್‌ಶಿಪ್‌ಗಾಗಿ ಭೂಸ್ವಾಧೀನ ವಿರೋಧಿಸಿ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದ ಡಿಸಿ ಕಚೇರಿ ಬಳಿ ಪ್ರತಿಭಟನೆ ನಡೆಸಿದ್ದು, ನಮ್ಮ ಭೂಮಿ ನಮ್ಮ ಹಕ್ಕು ಎಂದು ಘೋಷಣೆ ಕೂಗಿ ರೈತರ ಆಕ್ರೋಶ ವ್ಯಕ್ತಪಡಿಸಿದರು. ಇನ್ನು ಸ್ಥಳಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ನೀಡಿ ಪ್ರತಿಭಟನೆಕಾರರ ಸಮಸ್ಯೆಗಳನ್ನು ಆಲಿಸಿದ್ದು, ಯೋಜನೆ ಸಂಬಂಧ ರೈತರಿಗೆ ವಿವರವಾಗಿ ತಿಳಿಸಿ ಹೇಳಿದರು. ಅಲ್ಲದೇ ಡಿನೋಟಿಫಿಕೇಷನ್ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.
ಬಳಿಕ ಮಾತನಾಡಿದ ಡಿಕೆ ಶಿವಕುಮಾರ್, ಇಂಟಿಗ್ರೇಟೆಡ್ ಟೌನ್ ಶಿಪ್ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಮಾಡಿದ್ದರು. ಇದೀಗ ಆ ಯೋಜನೆಗೆ 20,000 ಕೋಟಿ ಖರ್ಚು ಮಾಡುತ್ತಿದ್ದೇವೆ. ಈ ಹಿಂದೆ ಬಿಜೆಪಿ, ಜೆಡಿಎಸ್ ಸರ್ಕಾರ ಇದನ್ನ ತಿರಸ್ಕರಿಸಬಹುದಿತ್ತು. ಇದನ್ನು ನಾವು ಡಿನೋಟಿಫಿಕೇಷನ್ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ. ಹೊಸ ಉದ್ಯೋಗ ಸೃಷ್ಟಿಸಲು ಮುಂದಾಗಿದ್ದೇವೆ. ಇಲ್ಲಿಗೆ ಮೆಟ್ರೋ ತರಲು ಕೂಡ ಪ್ಲ್ಯಾನ್ ಮಾಡುತ್ತಿದ್ದೇವೆ ಸಾವಿರ ಕೋಟಿ ವೆಚ್ಚದಲ್ಲಿ ಭೈರಮಂಗಲ ಅಭಿವೃದ್ಧಿಗೆ ಚಿಂತಿಸಿದ್ದೇವೆ. ನಗರದ ರೀತಿಯಲ್ಲಿ 26 ಹಳ್ಳಿಗಳನ್ನು ಅಭಿವೃದ್ಧಿ ಮಾಡುತ್ತೇವೆ. ಯೋಜನೆಗಾಗಿ ಯಾವುದೇ ಹಳ್ಳಿಗಳನ್ನು ಸ್ಥಳಾಂತರ ಮಾಡಲ್ಲ. ಭೂಸ್ವಾಧೀನವಾದ ರೈತರು ಹಣ ಪಡೆಯದಿದ್ದರೆ 50:50 ಅನುಪಾತದಲ್ಲಿ ಸೈಟ್ ನೀಡಲು ಐತಿಹಾಸಿಕ ನಿರ್ಧಾರ ಮಾಡಿದ್ದೇವೆ ಎಂದು ಹೇಳಿದರು.