image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಕಲ್ಯಾಣ ಕರ್ನಾಟಕ ಪ್ರತ್ಯೇಕ ಸಚಿವಾಲಯ: ಸಿಎಂ ಮಹತ್ವದ ಘೋಷಣೆ

ಕಲ್ಯಾಣ ಕರ್ನಾಟಕ ಪ್ರತ್ಯೇಕ ಸಚಿವಾಲಯ: ಸಿಎಂ ಮಹತ್ವದ ಘೋಷಣೆ

ಕಲಬುರಗಿ : 'ಸಚಿವ ಸಂಪುಟ ನಿರ್ಧರಿಸಿದಂತೆ ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯವು ಇನ್ನೊಂದು ವಾರದಲ್ಲಿ ಪೂರ್ಣ ಪ್ರಮಾಣದಲ್ಲಿ ಆರಂಭವಾಗಲಿದೆ. ಕಲಬುರಗಿಯಲ್ಲಿ ಇದರ ಕಚೇರಿ ಆರಂಭಿಸಲಾಗುವುದು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಕಲಬುರಗಿಯ ಪರೇಡ್‌ ಮೈದಾನದಲ್ಲಿನ ಕಲ್ಯಾಣ ಕರ್ನಾಟಕ ಉತ್ಸವ ಸಮಾರಂಭದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, 'ಸಂವಿಧಾನದ ಕಲಂ 371(ಜೆ) ರಕ್ಷಣೆಯೊಂದಿಗೆ ಅಭಿವೃದ್ಧಿ ಪಥದಲ್ಲಿರುವ ಕಲ್ಯಾಣ ಕರ್ನಾಟಕದಲ್ಲಿ ಏನೆಲ್ಲಾ ಅಭಿವೃದ್ಧಿ ಕಾರ್ಯಗಳು ನಡೆಯಬೇಕು ಎಂಬುದರ ಜೊತೆಗೆ ಅವುಗಳ ವೇಗ ಹೆಚ್ಚಿಸುವುದರ ಮೇಲೆ ನಿಗಾ ವಹಿಸಲು ಪ್ರತ್ಯೇಕ ಸಚಿವಾಲಯ ಆರಂಭಿಸಲು ಮಂಗಳವಾರ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

ಮುಂದಿನ ಒಂದು ವಾರದೊಳಗೆ ಸಿಬ್ಬಂದಿ ಸಹಿತ ಸಚಿವಾಲಯ ಕಲಬುರಗಿಯಲ್ಲಿ ಕಾರ್ಯಾರಂಭ ಮಾಡಲಿದೆ' ಎಂದರು. 'ಕಲ್ಯಾಣ ಕರ್ನಾಟಕ ಪ್ರತ್ಯೇಕ ಸಚಿವಾಲಯ ಅನುಮೋದನೆಯಿಂದ ಬಹು ನಿರೀಕ್ಷಿತ ಬೇಡಿಕೆ ಕೈಗೂಡಿದೆ. ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ದೊರೆಯಲಿದೆ' ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. 'ಈ ಹಿಂದೆ ಅಟಲ್ ಬಿಹಾರಿ ವಾಜಪೇಯಿ ಪ್ರಧಾನಿ ಆಗಿದ್ದ ವೇಳೆ ಅಂದು ಗೃಹ ಸಚಿವರಾಗಿದ್ದ ಬಿಜೆಪಿ ನಾಯಕ ಎಲ್.ಕೆ.ಅಡ್ವಾಣಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಪ್ರತ್ಯೇಕ ಸ್ಥಾನಮಾನ ನೀಡುವ ಅಗತ್ಯವಿಲ್ಲ ಎಂದು ಸಾರಾಸಗಟಾಗಿ ತಳ್ಳಿ ಹಾಕಿದ್ದರು. ಹೀಗಿದ್ದಾಗ ಡಾ। ಮನಮೋಹನಸಿಂಗ್ ನೇತೃತ್ವದ ಹಿಂದಿನ ಯುಪಿಎ ಸರ್ಕಾರ ಈ ಭಾಗಕ್ಕೆ ಪ್ರತ್ಯೇಕ ಸ್ಥಾನಮಾನ ನೀಡಿದೆ. ಆ ಮೂಲಕ ಅಭಿವೃದ್ಧಿಗೆ ಕಾಂಗ್ರೆಸ್‌ ಶ್ರೀಕಾರ ಹಾಡಿದೆ' ಎಂದು ತಿಳಿಸಿದರು.

Category
ಕರಾವಳಿ ತರಂಗಿಣಿ