ಮಂಗಳೂರು: ಕರ್ನಾಟಕ ಸರಕಾರವು ಕುದ್ಮುಲ್ ರಂಗರಾವ್ ಪುರಭವನದ ಎದುರಿನ ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಹೋಗುವ ರಸ್ತೆಗೆ ಸ್ವಾತಂತ್ರ್ಯ ಹೋರಾಟಗಾರ ಡಾ. ಅಮ್ಮೆಂಬಳ ಬಾಳಪ್ಪ ರಸ್ತೆ ಎಂದು ನಾಮಕರಣ ಮಾಡಿ ಆದೇಶ ಮಾಡಿದ್ದು, ಇದರ ನಾಮಫಲಕ ಅನಾವರಣ ಸಮಾರಂಭ ಆ.10ರಂದು ನಡೆಯಲಿದೆ ಎಂದು ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್ ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ಬೆಳಗ್ಗೆ 9:30ಕ್ಕೆ ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದರ್ ನಾಮಫಲಕ ಅನಾವರಣಗೊಳಿಸಲಿರುವರು.ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್, ದ.ಕ. ಸಂಸದ ಕ್ಯಾಬ್ರಿಜೇಶ್ ಚೌಟ ಭಾಗವಹಿಸಲಿದ್ದಾರೆ.
ಶ್ರೀಕ್ಷೇತ್ರ ಮಾಣಿಲದ ಶ್ರೀ ಮೋಹನ್‌ದಾಸ ಪರಮಹಂಸ ಸ್ವಾಮೀಜಿ ದಿವ್ಯ ಉಪಸ್ಥಿತಿಯೊಂದಿಗೆ ಬೆಳಗ್ಗೆ 10:30ಕ್ಕೆ ಪೊಲೀಸ್ ಲೇನ್‌ನ ನಾಸಿಕ್ ಬಿ.ಎಚ್. ಬಂಗೇರ ಸಭಾಭವನದಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಮಂಗಳೂರು ನಗರದ ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ದೀಪ ಪ್ರಜ್ವಲನೆಗೊಳಿಸಲಿರುವರು ಎಂದು ಮಯೂರ್ ಉಳ್ಳಾಲ್ ಮಾಹಿತಿ ನೀಡಿದರು.
ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಹೋಗುವ ರಸ್ತೆಗೆ ಸ್ವಾತಂತ್ರ್ಯ ಹೋರಾಟಗಾರ ಡಾ. ಅಮ್ಮೆಂಬಳ ಬಾಳಪ್ಪ ರಸ್ತೆ ಎಂದು ನಾಮಕರಣ ಮಾಡುವಂತೆ ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘ(ರಿ) ಸರಕಾರಕ್ಕೆ ಮನವಿ ಮಾಡಿತ್ತು. ಅದರಂತೆ ಸರಕಾರ ಇದೀಗ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣ ರಸ್ತೆಗೆ ಡಾ. ಅಮ್ಮೆಂಬಳ ಬಾಳಪ್ಪ ರಸ್ತೆ ಎಂದು ನಾಮಕರಣ ಮಾಡಿ ಆದೇಶ ಹೊರಡಿಸಿದೆ ಎಂದು ಮಯೂರ್ ಉಳ್ಳಾಲ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಉಪಾಧ್ಯಕ್ಷ ನಾರಾಯಣ ಸಿ. ಪೆರ್ನೆ, ಪ್ರಧಾನ ಕಾರ್ಯದರ್ಶಿ ಕುಶಾಲಪ್ಪ ಕುಲಾಲ್, ಜೊತೆ ಕಾರ್ಯದರ್ಶಿ ಪ್ರವೀಣ್ ಬಸ್ತಿ, ಸಮಾಜ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ಕುಲಾಲ್, ಶ್ರೀ ದೇವಿ ದೇವಸ್ಥಾನದ ಅಡಳಿತ ಮಂಡಳಿ ಅಧ್ಯಕ್ಷ ಸದಾಶಿವ ಕುಲಾಲ್ ಎ, ಶ್ರೀ ವೀರನಾರಾಯಣ ದೇವಸ್ಥಾನದ ಅಡಳಿತ ಮಂಡಳಿ ಅಧ್ಯಕ್ಷ ಸುಂದರ ಕುಲಾಲ್ ಶಕ್ತಿನಗರ, ದಳಪತಿ ಸೇವಾದಳದ ಪ್ರದೀಪ್ ಅತ್ತಾವರ, ಜನಾರ್ದನ ಬೊಂಡಾಲ ಉಪಸ್ಥಿತರಿದ್ದರು.